
ಬೆಂಗಳೂರು: ವಿಟ್ಲ ನೂತನ ತಾಲೂಕು ರಚನೆಗೆ ಆಗ್ರಹಿಸಿ ವಿಟ್ಲ ತಾಲೂಕು ರಚನಾ ಸಮಿತಿಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಸಂದರ್ಭ ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಕಂದಾಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ತಾಲೂಕಾಗಿ ಘೋಷಿಸಲಾಗುವುದು ಎಂದು ಭರವಸೆ ನೀಡಿದರು.
ವಿಟ್ಲವನ್ನು ಹೊಸ ತಾಲೂಕು ಆಗಿ ಘೋಷಿಸಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದು ಇತ್ತೀಚಿನ ವರ್ಷಗಳಲ್ಲಿ ಈ ಆಗ್ರಹಕ್ಕೆ ಮತ್ತಷ್ಟು ವೇಗ ಸಿಕ್ಕಿದೆ.
ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ನಿಯೋಗದಲ್ಲಿ ತಾಲೂಕು ರಚನಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಜೀವ ಭಂಡಾರಿ, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ಸಂಘಟನಾ ಕಾರ್ಯದರ್ಶಿಗಳಾದ ವಿಶ್ವನಾಥ ಎಂ ವೀರಕಂಭ, ಉದಯ ಕುಮಾರ್ ಆಲಂಗಾರು, ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಹಾಜರಿದ್ದರು.












































