
ತುಮಕೂರು: ಹೆಸರು ಮಾತ್ರ ರಾಮನದ್ದು ಮುಖ ರಾವಣನದ್ದು, ಸಿದ್ದರಾಮಯ್ಯರಿಂದಾಗಿ 61 ಕಾಂಗ್ರೆಸ್ ನಾಯಕರು ಪಕ್ಷ ತೊರೆದರು, ಅವರು ಮುಖ್ಯಮಂತ್ರಿಯಾಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ನಡೆದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳಿನ್ ಕುಮಾರ್ ಅವರು, ಟಿಪ್ಪು ಜಯಂತಿ ಬಗ್ಗೆ ವಿಶೇಷ ಕಾಳಜಿ ವಹಿಸಿದ ಸಿದ್ದರಾಮಯ್ಯ, ರೈತರ ಬದುಕು ಹಸನಾಗುವ ಬಗ್ಗೆ ಯೋಚನೆ ಮಾಡಲಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು. ಹಾಗಾಗಿ ರೈತರ ಶಾಪ ಕಾಂಗ್ರೆಸ್‌ಗೆ ತಟ್ಟಿದೆ ಎಂದು ಧಾಳಿ ಮಾಡಿದರು.
ಕಾಂಗ್ರೆಸಿನವರು ರೈತರು ದೇಶದ ಬೆನ್ನೆಲಬು ಎಂದರು. ಆದರೆ, ಯಾವತ್ತೂ ರೈತರ ಬೆನ್ನಿಗೆ ಮಿಲ್ಲುವ ಪ್ರಯತ್ನ ಮಾಡಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆ ಮೂಲಕ ರೈತರ ಬದುಕು ಹಸನು ಮಾಡುವ ಕಾರ್ಯಕ್ಕೆ ಮುಂದಾಗಿದೆ. ಕುವೆಂಪು ಅವರ ಹಾಡನ್ನು ರೈತ ಗೀತೆ ಮಾಡಿದ್ದ ಯಡಿಯೂರಪ್ಪನವರ ಸರ್ಕಾರ ರೈತರ ಬಗ್ಗೆ ಕಾಳಜಿ ಹೊಂದಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದರು.












































