
ಬೆಂಗಳೂರು: 2023ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು ಕಾಂಗ್ರೆಸ್ ಪಕ್ಷ ಎಲ್ಲ ಪಕ್ಷಗಳಿಗಿಂತ ಒಂದು ಹೆಜ್ಜೆ ಮುಂದಿದೆ. ಇದೀಗ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಂತೆ ಕಾಂಗ್ರೆಸ್ ಆಹ್ವಾನ ನೀಡಿದೆ. ವಲಸೆ ಹೋದವರೂ ಅರ್ಜಿ ಸಲ್ಲಿಸಲು ಮುಕ್ತ ಆಹ್ವಾನ ನೀಡಲಾಗಿದೆ.
ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳಿಂದ ಕಾಂಗ್ರೆಸ್ ಅರ್ಜಿ ಆಹ್ವಾನಿಸಿದ್ದು, 5 ಸಾವಿರ ರೂಪಾಯಿ ನೀಡಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಪಡೆಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಅರ್ಜಿ ಜೊತೆಯಲ್ಲಿ ಸಾಮಾನ್ಯ ವರ್ಗದವರು 2 ಲಕ್ಷ ರೂ. ಡಿಡಿ ಶುಲ್ಕ ನೀಡಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳು 1 ಲಕ್ಷ ರೂ. ಡಿಡಿ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಇಂದು ಪತ್ರಿಕಾಘೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.
ಆಕಾಂಕ್ಷಿಗಳು ನವೆಂಬರ್ 5ರಿಂದ ನವೆಂಬರ್ 15ರವರೆಗೆ ಅರ್ಜಿ ಸಲ್ಲಿಸಬಹುದು. ಯಾರು ಕಾಂಗ್ರೆಸ್ ಟಿಕೆಟ್ ಬಯಸುತ್ತಾರೋ ಅವರು ಅರ್ಜಿ ಹಾಕಬಹುದು. ನಾನು ಸ್ಪರ್ಧಿಸಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಬೇಕು. ಕಾಂಗ್ರೆಸ್ ಟಿಕೆಟ್ಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು. ಪಕ್ಷದಿಂದ ವಲಸೆ ಹೋದವರಿಗೂ ಮುಕ್ತ ಆಹ್ವಾನ ಎಂದು ಡಿಕೆಶಿ ಹೇಳುವ ಮೂಲಕ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಗಳಿಗೆ ಹೋಗಿರುವ ನಾಯಕರಿಗೂ ವಾಪಸ್ ಪಕ್ಷಕ್ಕೆ ಬರುವಂತೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.
ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL












































