
ಬೆಂಗಳೂರು:ಬೆಂಗಳೂರಿನ ಜನಪ್ರಿಯ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟವನ್ನು ಬಾಂಬ್ ಸ್ಫೋಟ ಎಂದು ಡಿಜಿಪಿ ಅಲೋಕ್ ಮೋಹನ್ ಅವರು ಸ್ಪಷ್ಟ ಪಡಿಸಿದ್ದು ಈ ಕುರಿತು ತನಿಖೆ ನಡೆಯುತ್ತಿದ್ದು ಘಟನೆ ಹಿಂದಿರುವವರನ್ನು ಅತಿ ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಉಳಿದವರು ತೀವ್ರತರನಾದ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಆಗಮಿಸಿದ್ದು ಹೆಚ್ಚಿನ ಸಾಕ್ಷ್ಯಗಳಿಗಾಗಿ ಪರಿಶೀಲನೆ ನಡೆಸುತ್ತಿದೆ.
ಈ ಬಗ್ಗೆ ಮಾತನಾಡಿದ ಅಲೋಕ್ ಮೋಹನ್, “ಇಂದಿನ ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ತನಿಖೆ ನಡೆಯುತ್ತಿದೆ. ಎಫ್ಎಸ್ ಎಲ್ ತಂಡದಲ್ಲಿ ವರದಿ ಸ್ವೀಕಾರದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು” ಎಂದು ಹೇಳಿದ್ದಾರೆ.