
ಬೆಂಗಳೂರು: ರಾಜ್ಯ ರಾಜಧಾನಿಯ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಹಾಕಿದ ಬೆನ್ನಲ್ಲೇ ಪೊಲೀಸರು ಪರಿಶೀಲನೆ ನಡೆಸಿ ಕಿಡಿಗೇಡಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ಉಲ್ಲೇಖಿಸಿ ಬೆದರಿಕೆ ಹಾಕಲಾಗಿತ್ತು.
ಎಲ್ಲವೂ ಸಹ ಇಂದು ಸ್ಪೋಟಗೊಳ್ಳಲಿದೆ ಎಂದು ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು. ಮೇಲ್ ನೋಡಿದ ಬಳಿಕ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು. ಮಾಹಿತಿ ಬಳಿಕ ಪರಿಶೀಲನೆ ನಡೆಸಿದ ಪೊಲೀಸರಿಗೆ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ತಿಳಿಯಿತು. ಈ ಹಿನ್ನೆಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇನ್ನು ಮಾಹಿತಿ ಪ್ರಕಾರ ಕೇವಲ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಬಂದಿದ್ದು ಮಾತ್ರವಲ್ಲ, ದೇಶದ 20 ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಬೆಂಗಳೂರಿನ ಮೂರು ಮ್ಯೂಸಿಯಂ ಗಳಿಗೆ ಬೆದರಿಕೆ ಇ ಮೇಲ್ ಬಂದಿದ್ದು, ವಿಶ್ವೇಶ್ವರಯ್ಯ ಮ್ಯೂಸಿಯಂ, ನೆಹರು ತಾರಾಲಯ, ನ್ಯಾಷನಲ್ ಗ್ಯಾಲರಿ ಅಫ್ ಮಾರ್ಡನ್ ಆರ್ಟ್ ಸೇರಿ ನಗರದ ಮೂರು ಮ್ಯೂಸಿಯಂಗೆ ಬೆದರಿಕೆ ಇಮೇಲ್ ಬಂದಿದೆ. ಇದಲ್ಲದೆ ಇತರೆ ರಾಜ್ಯಗಳ ಇಪ್ಪತ್ತಕ್ಕೂ ಹೆಚ್ಚು ಮ್ಯೂಸಿಯಂ ಗಳಿಗೆ ಇದೇ ರೀತಿ ಇ ಮೇಲ್ ಬೆದರಿಕೆ ಬಂದಿದೆ ಎಂದು ತಿಳಿದು ಬಂದಿದೆ.