Karnataka

ಹಿಜಾಬ್ ಪರ ವಿರೋಧ ಅರ್ಜಿಗಳ ವಿಚಾರಣೆ: ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದ ಹೈಕೋರ್ಟ್ ಏಕಸದಸ್ಯ ಪೀಠ

ಬೆಂಗಳೂರು: ಹಿಜಾಬ್ ಪರ ಹಾಗು ವಿರೋಧಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಯಾವುದೇ ಮಧ್ಯಂತರ ನೀಡದೆ ಇದೀಗ ಅರ್ಜಿಗಳ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವಹಿಸಲು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದೆ.

ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಏಕಸದಸ್ಯ ಪೀಠ, ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಸಿಜೆಗೆ ವರ್ಗಾಹಿಸಿದ್ದಾರೆ. ಹಾಗು ಕೇಸಿಗೆ ಸಂಬಂಧಿಸಿದ ಸಂಪೂರ್ಣ ಕಡತಗಳನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ ನ ರಿಜಿಸ್ಟ್ರಾರ್ ಗೆ ನ್ಯಾಯಮೂರ್ತಿ ನಿರ್ದೇಶನ ನೀಡಿದ್ದಾರೆ.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗು ಹಿಜಾಬ್ ಅರ್ಜಿದಾರರ ಪರವಾಗಿ ದೇವದತ್ ಕಾಮತ್ ವಾದ ಮಂಡಿಸಿದ್ದರು. ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ದೀಕ್ಷಿತ್ ಬಳಿ ಅರ್ಜಿದಾರರ ಪರ ವಕೀಲರು ಮಧ್ಯಂತರ ಆದೇಶ ನೀಡುವಂತೆ ಪೀಠವನ್ನು ಒತ್ತಾಯಿಸಿದರು. ಮಧ್ಯಂತರ ಆದೇಶವನ್ನು ವಿರೋಧಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ನ್ಯಾಯಾಲಯವು ಅಂತಿಮ ಆದೇಶವನ್ನು ಶೀಘ್ರವಾಗಿ ನೀಡಬೇಕು ಎಂದು ವಾದಿಸಿದರು.

ಮಧ್ಯಂತರ ಆದೇಶ ನೀಡದಂತೆ ಸರ್ಕಾರ ಪರ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಮೂರ್ತಿಗಳು ಯಾವುದೇ ಮಧ್ಯಂತರ ತೀರ್ಪು ನೀಡದೆ ವಿಸ್ಕೃತ ಪೀಠಕ್ಕೆ ವಿಚಾರಣೆಯನ್ನು ವರ್ಗಾಯಿಸಿದೆ.

Exit mobile version