
ಬೆಂಗಳೂರು: ಪ್ರತಿಪಕ್ಷ ಬಿಜೆಪಿಯಿಂದ ಭಾರೀ ವಿರೋಧ ಎದುರಿಸಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024ಕ್ಕೆ ವಿಧಾನ ಪರಿಷತ್ತಿನಲ್ಲಿ ಸೋಲಾಗಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಭಾರೀ ಮುಖಭಂಗವಾಗಿದೆ. ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್ನಲ್ಲಿ ತಿರಸ್ಕರಿಸಲಾಗಿದೆ.
ಶುಕ್ರವಾರ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಪರಿಷತ್ ನಲ್ಲಿ ಮಂಡಿಸಿದರು. ವಿಧೇಯಕ ಮಂಡಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, “2003ರಿಂದ ವಿಧೇಯಕ ಜಾರಿಯಲ್ಲಿದೆ. 2003ರ ಮೇ 1 ರಿಂದ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಈಗಿರುವ ನಿಯಮದಂತೆ ಸರ್ಕಾರಕ್ಕೆ 8 ಕೋಟಿ ರೂ. ಸಲ್ಲಿಕೆ ಆಗುತ್ತಿದೆ ಎಂದರು. ಈಗಿನ ಸಾಮಾನ್ಯ ಸಂಗ್ರಹಣ ನಿಧಿಯಿಂದ ಧಾರ್ಮಿಕ ಕೆಲಸ ಮಾಡಲಾಗಲ್ಲ. ಹೊಸ ನಿಯಮದಿಂದ 60 ಕೋಟಿ ರೂಪಾಯಿ ಹಣ ಸಂಗ್ರಹ ಆಗುತ್ತದೆ. ಸಿ ದರ್ಜೆಯ ದೇಗುಲಗಳನ್ನು ನಿರ್ವಹಿಸಲು ಇದರಿಂದ ಸಾಧ್ಯವಾಗುತ್ತದೆ” ಎಂದರು.
ವಿಧೇಯಕದಲ್ಲಿದ್ದ ನೂತನ ತಿದ್ದುಪಡಿಗಳಿಗೆ ಬಿಜೆಪಿ ಹಾಗೂ ಮಿತ್ರ ಪಕ್ಷ ಜೆಡಿಎಸ್ ಸದಸ್ಯರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು. ಒಂದು ಕೋಟಿಗಿಂತಲೂ ಹೆಚ್ಚು ಆದಾಯ ಇರುವ ದೇವಸ್ಥಾನಗಳ ಒಟ್ಟು ಆದಾಯದಿಂದ ಶೇಕಡ 10% ರಷ್ಟು ನಿಧಿ ಸಂಗ್ರಹಣೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು. ಚರ್ಚೆ ಬಳಿಕ ತಿದ್ದುಪಡಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿಲಾಯಿತು. ವಿಧೇಯಕದ ಪರವಾಗಿ ಏಳು ಮತಗಳು ಚಲಾವಣೆಯಾದರೆ, ವಿಧೇಯಕದ ವಿರುದ್ಧವಾಗಿ 18 ಮತಗಳು ಚಲಾವಣೆಯಾದವು. ಇದರೊಂದಿಗೆ ಸರ್ಕಾರ ಮಂಡಿಸಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್ ನಲ್ಲಿ ತಿರಸ್ಕೃತಗೊಂಡಿತು.


