
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯದ ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ಒಟ್ಟು 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಆಗಿರುವ ಸತೀಶ್ ಬಾಬು ಅವರ ಚಿತ್ರದುರ್ಗ ಮತ್ತು ಬೆಂಗಳೂರು ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸತೀಶ್ ಬಾಬು ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.
ಭ್ರಷ್ಟಾಚಾರ ಆರೋಪದ ಹಿನ್ನೆಲೆ ಬೆಂಗಳೂರು ದಕ್ಷಿಣ ತಾಲೂಕಿನ ಚೆನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾಸಲುಪುರ ಗ್ರಾಮದಲ್ಲಿರುವ ಟೌನ್ ಅಂಡ್ ರೂರಲ್ ಪ್ಲ್ಯಾನಿಂಗ್ ಜಂಟಿ ನಿರ್ದೇಶಕ ಮಂಜೇಶ್ ಅವರ ಮಂಜೇಶ್ ಫಾರ್ಮ್ಹೌಸ್ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಮಂಜೇಶ್ ಆನೇಕಲ್ನಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸ್ತಿದ್ದಾರೆ. ಮಂಜೇಶ್ ಅವರಿಗೆ ಸೇರಿದ 9 ಕಡೆ ರಾಮನಗರ ಲೋಕಾಯುಕ್ತ ಇನ್ಸ್ಪೆಕ್ಟರ್ ಲಕ್ಷ್ಮಣ್ ನೇತೃತ್ವದಲ್ಲಿ ದಾಳಿ ನಡೆದಿದೆ.












































