
ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಭಾನುವಾರ ರಾತ್ರಿ ನಡೆದ ಕೊಲೆ ಪ್ರಕರಣದಲ್ಲಿ ಮೃತರಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರನ್ನು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ 6 ಜನರು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದರು. ಈ ಕುರಿತು ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸುವ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಸದ್ಯಕ್ಕೆ ಯಾವುದೇ ಸಂಘಟನೆ ನಿಷೇಧಿಸುವ ಬಗ್ಗೆ ನಿರ್ಧರಿಸಿಲ್ಲ. ಅದಕ್ಕೆ ಕಾನೂನು ಪ್ರಕ್ರಿಯೆಗಳಿವೆ. ಸಮಯ ನೋಡಿಕೊಂಡು ಸಂಘಟನೆ ನಿಷೇಧಿಸುತ್ತೇವೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಇಂದು ಹಿಂಸೆ ಉಲ್ಬಣಿಸಿದ ಹಿನ್ನಲೆಯಲ್ಲಿ ಶಿವಮೊಗ್ಗ ಭದ್ರತೆಗೆ ಬೆಂಗಳೂರಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 1,200 ಪೊಲೀಸ್ ಸಿಬ್ಬಂದಿ ಇದ್ದಾರೆ. ಹೆಚ್ಚುವರಿಯಾಗಿ ಬೆಂಗಳೂರಿನಿಂದಲೂ 200 ಸಿಬ್ಬಂದಿ ಕಳುಹಿಸಲಾಗಿದೆ. ಈಗಾಗಲೇ ಎಡಿಜಿಪಿ ಎಸ್.ಮುರುಗನ್ ಶಿವಮೊಗ್ಗದಲ್ಲಿ ಬೀಡುಬಿಟ್ಟಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ಹಂತದಲ್ಲಿರುವ ಕಾರಣ ಬಂಧಿತರ ಮಾಹಿತಿ ನೀಡಲು ಸಾಧ್ಯವಿಲ್ಲ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಸಚಿವರು ವಿವರಿಸಿದರು.
ಹರ್ಷ ಹತ್ಯೆಯಲ್ಲಿ ನಾಲ್ಕರಿಂದ ಐದು ಮಂದಿ ಪಾಲ್ಗೊಂಡಿರುವ ಮಾಹಿತಿಯಿದೆ. ಮತ್ತೆ ಎಷ್ಟು ಜನ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.












































