
ಬೆಂಗಳೂರು: ಹಿಂದೂ ಪದ ಪರ್ಷಿಯನ್ ಪದ, ಅದು ಅಶ್ಲೀಲ ಎಂಬ ಅರ್ಥ ಕೊಡುತ್ತದೆ ಎಂದು ವಿವಾದ ಎಬ್ಬಿಸಿ ಎಲ್ಲೆಡೆ ಹಿಂದೂಗಳ, ರಾಜಕೀಯ ಪಕ್ಷಗಳ ಅಷ್ಟೇ ಅಲ್ಲದೆ ಸ್ವಪಕ್ಷೀಯರ ವಿರೋಧ ಎದುರಿಸಿದ್ದ ಸತೀಶ ಜಾರಕಿಹೊಳಿ ಇದೀಗ ಹೇಳಿಕೆ ಹಿಂಪಡೆದಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ತನ್ನ ಹೇಳಿಕೆಯನ್ನು ಹಿಂಪಡೆದಿದ್ದು ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ನಿನ್ನೆಯವರೆಗೂ ತಮ್ಮ ಹೇಳಿಕೆಗೆ ಬದ್ಧ ಎಂದು ಮೊಂಡುತನೇ ಪ್ರದರ್ಶಿಸಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇದೀಗ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಈ ನಡುವೆ ವಿವಾದ ತಾರಕಕ್ಕೆ ಏರಿದ್ದು ಬೆಂಗಳೂರಿನಲ್ಲಿ ವಕೀಲ ದಿಲೀಪ್ ಕುಮಾರ್ ಎಂಬುವರು ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್‌ನಲ್ಲಿ ದಿಲೀಪ್ ಖಾಸಗಿ ದೂರು ದಾಖಲಿಸಿದ್ದಾರೆ.