
ಬೆಂಗಳೂರು: ಮತಾಂತರ ನಿಷೇಧ ಕಾಯಿದೆ ಅಥವಾ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕರವಾಗಿದ್ದ ಈ ಮಸೂದೆ ವಿಧಾನಪರಿಷತ್ತಿನಲ್ಲಿ ಬಿಜೆಪಿ ಸಂಖ್ಯಾಬಲದ ಕೊರತೆಯಿಂದ ಮಂಡಿಸಿರಲಿಲ್ಲ.
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರು, “ಮತಾಂತರ ನಿಷೇಧ ಕಾಯಿದೆ ಅರ್ಥಾತ್ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ವಿಧೇಯಕವನ್ನು ನಾವು ವಿಧಾನಸಭೆಯಲ್ಲಿ ಅಂಗೀಕರಿಸಿದ್ದೇವೆ. ಕಾರಣಾಂತರಗಳಿಂದ ಅದು ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಇಂದು ಸಚಿವ ಸಂಪುಟ ನಿರ್ಧರಿಸಿದೆ” ಎಂದು ಹೇಳಿದ್ದಾರೆ.
ಮಸೂದೆ ಜಾರಿ ಮೂಲಕ ಬಲವಂತದ ಹಾಗು ಆಮಿಷದ ಮತಾಂತರಕ್ಕೆ ಕಡಿವಾಣ ಬೀಳುವ ಸಾಧ್ಯತೆಯಿದೆ. ಈ ಮಸೂದೆಯನ್ನು ವಿರೋಧಿಸಿ ಈ ಹಿಂದೆ ಬೆಂಗಳೂರು ಬಿಷಪ್ ಸರಕಾರಕ್ಕೆ ಪತ್ರ ಬರೆದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಮುಂದಿನ ಅಧಿವೇಶನದಲ್ಲಿ ವಿಧಾನಪರಿಷತ್ತಿನಲ್ಲಿ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಈಗಾಗಲೇ ವಿಧಾನಪರಿಷತ್ತಿನ 4 ಸ್ಥಾನಗಳಿಗೆ ಚುನಾವಣೆ ಇರುವುದರಿಂದ ಹಾಗು ಆ ನಾಲ್ಕೂ ಸ್ಥಾನಗಳು ಬಿಜೆಪಿ ಪಾಲಾಗುವ ಸೂಚನೆ ಇರುವ ಕಾರಣ ಮುಂದಿನ ಅಧಿವೇಶನದ ಹೊತ್ತಿಗೆ ಬಿಜೆಪಿ ಮೇಲ್ಮನೆಯಲ್ಲಿ ಬಹುಮತ ಪಡೆಯುವುದು ನಿಶ್ಚಯವಾದಂತಾಗಿದೆ.












































