
ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪಿಗಳ ಅಕ್ರಮ ಆಸ್ತಿಗಳನ್ನು ನೆಲಸಮಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಶನಿವಾರ ಹೇಳಿದ್ದಾರೆ. “ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಆರೋಪಿಗಳ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರ ಅಕ್ರಮ ಆಸ್ತಿಗಳನ್ನು ಸಹ ನೆಲಸಮಗೊಳಿಸಲಾಗುವುದು” ಎಂದು ಕುಮಾರ್ ತಿಳಿಸಿದ್ದಾರೆ.
ಕಾನ್ಪುರದಲ್ಲಿ ಶುಕ್ರವಾರ ಮಾರುಕಟ್ಟೆ ಸ್ಥಗಿತಗೊಂಡಿದ್ದಕ್ಕಾಗಿ ವಿವಿಧ ಸಮುದಾಯಗಳಿಗೆ ಸೇರಿದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ನಂತರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಘರ್ಷಣೆಯ ನಂತರ ಇಬ್ಬರು ವ್ಯಕ್ತಿಗಳು ಮತ್ತು ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ. ಮುಸ್ಲಿಂ ಸಮುದಾಯದ ಕಿಡಿಗೇಡಿಗಳು ಅಂಗಡಿಗಳನ್ನು ಮುಚ್ಚಿಸಲು ಪ್ರಯತ್ನಿಸಿದ ನಂತರ ಘಟನೆ ಪ್ರಾರಂಭವಾಯಿತು, ಅದನ್ನು ಇತರ ಗುಂಪಿನವರು ವಿರೋಧಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರ ಹಿಂಸಾಚಾರ ಪ್ರಕರಣದಲ್ಲಿ ಇದುವರೆಗೆ ಒಟ್ಟು 36 ಮಂದಿಯನ್ನು ಬಂಧಿಸಲಾಗಿದ್ದು, ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪರಿಸ್ಥಿತಿಯನ್ನು ಕಾಪಾಡಲು ಕಾನ್ಪುರದ ಯತೀಂ ಖಾನಾ ಮತ್ತು ಪರೇಡ್ ಕ್ರಾಸ್‌ರೋಡ್‌ಗಳ ನಡುವೆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸುದ್ದಿಯನ್ನು ನೇರವಾಗಿ ಪಡೆಯಲು, ನಮ್ಮ ವಾಟ್ಸಾಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ :
https://chat.whatsapp.com/CMUDdTXoFVn7atm3zHYGrd