
ನವದೆಹಲಿ: ಕೊರೋನಾ ಸೋಂಕು ದೇಶದಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಸಂಭಾವ್ಯ ೪ನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಚರ್ಚಿಸಿದರು. ಮತ್ತು 3ಟಿ’ ಸೂತ್ರ ಪಾಲನೆ ಮಾಡುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇತರ ದೇಶಗಳಿಗೆ ಹೋಲಿಸಿದರೆ ಕೋವಿಡ್ ಸಾಂಕ್ರಾಮಿಕ ರೋಗವನ್ನು ಭಾರತ ಉತ್ತಮವಾಗಿ ನಿರ್ವಹಿಸುತ್ತಿದೆ. ಆದರೂ ಅನೇಕ ರಾಜ್ಯಗಳಲ್ಲಿ ಸೋಂಕು ಏರಿಕೆಯಾಗುತ್ತಿದೆ. ಹಾಗಾಗಿ ನಾವೆಲ್ಲರೂ ಎಚ್ಚರದಿಂದ ಇರಬೇಕು. ಜನರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಬೇಕು ಮತ್ತು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಕೋವಿಡ್ ಟೆಸ್ಟಿಂಗ್, ಟ್ರ್ಯಾಕಿಂಗ್ ಹಾಗೂ ಟ್ರೀಟ್‌ಮೆಂಟ್‌ಗೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್, ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು ಸೇರಿದಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.












































