
ನವದೆಹಲಿ: ಹಠಾತ್ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ತನ್ನ ಒಕ್ಕೂಟ ಎನ್.ಡಿ.ಎ ಕಡೆಯಿಂದ ಉಪ ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲರಾಗಿರುವ ಜಗದೀಪ್ ಧಂಖರ್ ರನ್ನು ಉಪ ರಾಷ್ಟ್ರಪತಿ ಚುನಾವಣೆ ಎನ್ ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.
ಈಗಿನ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳಲಿದ್ದು, ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ.












































