
ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜತೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಬಿಜೆಪಿ ಪಾಳಯದಲ್ಲಿ ಕುತೂಹಲ ಮನೆಮಾಡಿದೆ.
ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜಾಹುಲಿ ಯಡಿಯೂರಪ್ಪ ಅವರೊಂದಿಗೆ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾಕುತೆ ನಡೆಸಿದ್ದಾರೆ. ಯಾವ ವಿಷಯದ ಕುರಿತು ಈ ಇಬ್ಬರೂ ಮಾತುಕತೆ ನಡೆಸಿದ್ದಾರೆಂಬುದು ಯಾರಿಗೂ ತಿಳಿದುಬಂದಿಲ್ಲ.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಹೈಕಮಾಂಡ್ ಕೆಳಗಿಳಿಸಿದರೂ ಕರ್ನಾಟಕದ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸುವ ಲಿಂಗಾಯತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರಿಗೆ ಜಾತಿಯ ಅಪಾರ ಬೆಂಬಲ ಇದೆ. ಜತೆಗೆ ಇತರೆ ಜಾತಿಗಳವರ ದೊಡ್ಡ ಅಭಿಮಾನಿ ಪಡೆಯೇ ಇದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಅವರಿಗೆ ಅಭಿಮಾನಿಗಳಿದ್ದಾರೆ. ಇದನ್ನು ಹೈಕಮಾಂಡ್ ಮತ್ತೆ ಮನಗಂಡಂತೆ ಕಾಣುತ್ತಿದೆ.
ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಮೇಲೆ ಯಡಿಯೂರಪ್ಪ ಸಾರ್ವಜನಿಕ ವೇದಿಕೆಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಈಗ ಚುನಾವಣೆ ಹತ್ತಿರ ಆಗುತ್ತಿದ್ದಂತೆಯೇ ಯಡಿಯೂರಪ್ಪ ಅವರಿಗೆ ಬಿಜೆಪಿ ಮತ್ತೆ ಪಕ್ಷದಲ್ಲಿ ಸ್ಥಾನಮಾನ ನೀಡಿದೆ. ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ಅವರನ್ನು ನೇಮಿಸಿದ ಬಳಿಕ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕೃಪಾಕಟಾಕ್ಷದಿಂದ ದೊಡ್ಡ ಹುದ್ದೆ ಪಡೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇತ್ತೀಚಿಗೆ ಬಿಜೆಪಿ ಕಾರ್ಯಕರ್ತರ ಪಕ್ಷ ಯಡಿಯೂರಪ್ಪ ಅನಿವಾರ್ಯರಲ್ಲ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಆದರೆ “ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ಪಾತ್ರವು ಹೆಚ್ಚಿನ ಜವಾಬ್ದಾರಿಗಳೊಂದಿಗೆ ಇರಲಿದೆ” ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.












































